ಗದಗವಾಣಿ ಸುದ್ದಿಮೂಲ
ಶಿರಹಟ್ಟಿ, ಜು. 13: ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ಕಾರ್ಯದ ಅಂಗವಾಗಿ ಮನೆ-ಮನೆಗೆ ತೆರಳಿ ಎನ್ಯೂಮರೇಶನ್ ಫಾರ್ಮ್ಗಳನ್ನು ಸಂಗ್ರಹಿಸುತ್ತಿದ್ದ ವೇಳೆ ಬಿ.ಎಲ್.ಒ. (Booth Level Officer) ಒಬ್ಬರು ಅಸ್ವಸ್ಥಗೊಂಡ ಘಟನೆ ತಾಲೂಕಿನ ಸುಗ್ನಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಸುಗ್ನಹಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 174ರ ಬಿ.ಎಲ್.ಒ. ಆಗಿರುವ ಸುಧಾ ಹೇಮಗಿರಿಮಠ ಅವರು ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಅಸ್ವಸ್ಥಗೊಂಡಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ತಕ್ಷಣವೇ ಅವರಿಗೆ ನೀರು ನೀಡಿ ಪ್ರಾಥಮಿಕ ನೆರವು ಒದಗಿಸಿ, ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಮೇಲಾಧಿಕಾರಿ ಬಸವರಾಜ ನಂದಗಾವಿ ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ, ತಮ್ಮ ವಾಹನದಲ್ಲೇ ಬೆಳ್ಳಟ್ಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಬಳಿಕ ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ ಅವರು ಆಸ್ಪತ್ರೆಗೆ ಭೇಟಿ ನೀಡಿ, ಬಿ.ಎಲ್.ಒ. ಅವರ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಹಿನ್ನೆಲೆಯಲ್ಲಿ ಬಿ.ಎಲ್.ಒ.ಗಳು ಪ್ರತಿದಿನ ಮನೆ-ಮನೆಗೆ ತೆರಳಿ ಕಾರ್ಯನಿರ್ವಹಿಸುತ್ತಿದ್ದು, ನಿರಂತರ ಕೆಲಸದ ಒತ್ತಡ ಹಾಗೂ ಬಿಸಿಲಿನ ನಡುವಿನ ಕರ್ತವ್ಯದಿಂದ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಿಬ್ಬಂದಿ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ವರದಿ: ಗೌರೀಶ ನಾಗಶೆಟ್ಟಿ|ಶಿರಹಟ್ಟಿ

